ಜಿಲ್ಲಾಧಿಕಾರಿ ಪಿ.ರವೀಂದ್ರ ಮಾಹಿತಿ
ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನ ಬಿತ್ತನೆಗೆ ಅಗತ್ಯವಿರುವ ಬಿತ್ತನೆ ಬೀಜ ಹಾಗೂ ರಸಗೊಬ್ಬರ ದಾಸ್ತಾನು ಇದ್ದು, ಈಗಾಗಲೇ ಸಮರ್ಪಕ ವಿತರಣೆಗೆ ಅಗತ್ಯ ಕ್ರಮಗಳನ್ನು ಕೈಗೊಂಡಿದ್ದು, ರೈತರು ಆಂತಕ ಪಡುವ ಅಗತ್ಯವಿಲ್ಲ ಎಂದು ಜಿಲ್ಲಾಧಿಕಾರಿ ಪಿ.ರವೀಂದ್ರ ತಿಳಿಸಿದರು.
ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ 2024-25 ನೇ ಸಾಲಿನ ಮುಂಗಾರು ಹಂಗಾಮಿನ ಪೂರ್ವ ಸಿದ್ಧತೆಯ (ಬಿತ್ತನೆ ಬೀಜ ಮತ್ತು ರಸಗೊಬ್ಬರ) ಕುರಿತು ರೈತರು, ರಸಗೊಬ್ಬರ ಮಾರಾಟಗಾರರು, ಕೃಷಿ, ತೋಟಗಾರಿಕೆ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಜಿಲ್ಲಾ ಮಟ್ಟದ ಸಭೆ ನಡೆಸಿ ಮಾತನಾಡಿದರು.
ಜಿಲ್ಲೆಯಲ್ಲಿ ಇತ್ತೀಚೆಗೆ ಉತ್ತಮ ಮಳೆಯಾಗಿರುವುದರಿಂದ ರೈತರು ಮುಂಗಾರು ಹಂಗಾಮಿನ ಕೃಷಿ ಚಟುವಟಿಕೆಗಳನ್ನು ಕೈಗೊಳ್ಳಲು ಮುಂದಾಗಿದ್ದಾರೆ. ಹೀಗಾಗಿ ರೈತರಿಗೆ ಯಾವುದೇ ರೀತಿಯಲ್ಲಿ ತೊಂದರೆಯಾಗದಂತೆ ಅಧಿಕಾರಿಗಳು ಕ್ರಮ ವಹಿಸಬೇಕು ಎಂದು ಸಭೆಯಲ್ಲಿ ಕಟ್ಟು ನಿಟ್ಟಿನ ಸೂಚನೆ ನೀಡಿದರು.
ಜಿಲ್ಲೆಯಲ್ಲಿ ರೈತರಿಗೆ ಬಿತ್ತನಗೆ ಅಗತ್ಯವಾಗಿ ಬೇಕಾಗಿರುವ ಬಿತ್ತನೆ ಬೀಜ ಹಾಗೂ ರಸಗೊಬ್ಬರಗಳನ್ನು ದಾಸ್ತಾನು ಮಾಡಿಕೊಂಡು ಸಕಾಲದಲ್ಲಿ ವಿತರಿಸಬೇಕು. ಈ ಬಗ್ಗೆ ಯಾವುದೇ ದೂರುಗಳು ರೈತರಿಂದ ಬಾರದಂತೆ ಎಚ್ಚರ ವಹಿಸಬೇಕು ಎಂದು ಕೃಷಿ ಮತ್ತು ತೋಟಗಾರಿಕೆ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಎಲ್ಲ ಮಾದರಿಯ ರಸಗೊಬ್ಬರ ದರದ ನಾಮಫಲಕಗಳನ್ನು ಮಳಿಗೆಗಳ ಮುಂದೆ ಅಳವಡಿಸಬೇಕು, ಎಂಆರ್‍ಪಿ ದರಕ್ಕಿಂತ ಹೆಚ್ಚಿನ ಬೆಲೆಗೆ ರಸಗೊಬ್ಬರ ಮಾರಾಟ ಮಾಡಿದರೆ, ಕೃತಕ ಅಭಾವ ಸೃಷ್ಟಿಸಿದರೆ ಮುಲಾಜಿಲ್ಲದೇ ಅಂಗಡಿಯ ಲೈಸೆನ್ಸ್ ರದ್ದುಗೊಳಿಸಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ರಸಗೊಬ್ಬರ ಮಾರಾಟಗಾರರಿಗೆ ಎಚ್ಚರಿಸಿದರು.
ಯಾವುದೇ ಕೃಷಿ ಪರಿಕರ ಮಾರಾಟಗಾರರು ರೈತರಿಗೆ ರಸಗೊಬ್ಬರ ಮಾರಾಟವನ್ನು ಪಾರದರ್ಶಕವಾಗಿ ಮಾಡಬೇಕು. ಬಿತ್ತನೆ ಬೀಜಗಳನ್ನು ಬೇಡಿಕೆಗಳಿಗೆ ಅನುಗುಣವಾಗಿ ಉತ್ತಮ ಬೀಜಗಳನ್ನು ಒದಗಿಸಬೇಕು. ಯಾವುದೇ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ಭಾಗಿಯಾಗಬಾರದೆಂದು ಕಿವಿಮಾತು ಹೇಳಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪ್ರಕಾಶ್ ಜೆಟಿ ನಿಟ್ಟಾಲಿ, ಜಂಟಿ ಕೃಷಿ ನಿರ್ದೇಶಕಿ ಜಾವೀದಾ ನಸೀಮಾ ಖಾನಂ, ಜಂಟಿ ಕೃಷಿ ನಿರ್ದೇಶಕಿ, ರೈತ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಭಕ್ತರಹಳ್ಳಿ ಬೈರೇಗೌಡ, ರೈತರು, ಕೃಷಿ ಮತ್ತು ತೋಟಗಾರಿಕೆ ಇಲಾಖೆಯ ಅಧಿಕಾರಿಗಳು ಮತ್ತಿತರರು ಹಾಜರಿದ್ದರು.

