ಮಂಡ್ಯ, ನವೆಂಬರ್ 26, 2025 : ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಮುಖ್ಯಮಂತ್ರಿ ಸ್ಥಾನ ದೊರೆಯಲಿ ಎಂದು ಹಾರೈಸಿ, ಮಂಡ್ಯ ಜಿಲ್ಲೆಯ ಮಳವಳ್ಳಿ ಪಟ್ಟಣದಲ್ಲಿರುವ ಐತಿಹಾಸಿಕ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ದೇಗುಲದಲ್ಲಿ ವಿಶೇಷ ಪೂಜಾ ಕಾರ್ಯಕ್ರಮವನ್ನು ನೆರವೇರಿಸಲಾಯಿತು.
ಈ ವಿಶೇಷ ಪೂಜೆಯನ್ನು ಮಳವಳ್ಳಿ ತಾಲ್ಲೂಕಿನ ಒಕ್ಕಲಿಗರ ಸಂಘದ ವತಿಯಿಂದ ಆಯೋಜಿಸಲಾಗಿತ್ತು.ಸಂಘದ ತಾಲ್ಲೂಕು ಅಧ್ಯಕ್ಷ ವಿ.ಪಿ. ನಾಗೇಶ್ ಅವರ ನೇತೃತ್ವದಲ್ಲಿ ಕಾರ್ಯಕರ್ತರು ಪಾಲ್ಗೊಂಡಿದ್ದರು.ಮಾಲಾಧಾರಣೆ ಮಾಡಿ ದೇವಸ್ಥಾನದ ಒಳಗೆ ಪ್ರವೇಶಿಸಿದ ಕಾರ್ಯಕರ್ತರು, ಡಿ.ಕೆ. ಶಿವಕುಮಾರ್ ಅವರ ಭಾವಚಿತ್ರ ಹಿಡಿದು ಅವರ ಹೆಸರಿನಲ್ಲಿ ಅರ್ಚನೆ ಮತ್ತು ಪ್ರಾರ್ಥನೆ ಸಲ್ಲಿಸಿದರು.ಈ ಸಂದರ್ಭದಲ್ಲಿ ‘ಮುಂದಿನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್’ ಎಂದು ಘೋಷಣೆ ಕೂಗಿದ ಕಾರ್ಯಕರ್ತರು, ಈ ಕುರಿತು ತಮ್ಮ ಆಗ್ರಹವನ್ನೂ ವ್ಯಕ್ತಪಡಿಸಿದರು.
ಸಿಎಂ ಸ್ಥಾನ ಬಿಟ್ಟುಕೊಡುವಂತೆ ಒತ್ತಾಯ
ಪೂಜಾ ಕಾರ್ಯಕ್ರಮದ ಬಳಿಕ ಮಾತನಾಡಿದ ಒಕ್ಕಲಿಗರ ಸಂಘದ ಮುಖಂಡರು, ಡಿ.ಕೆ. ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಾಗಿ ಪಕ್ಷವನ್ನು ಅಧಿಕಾರಕ್ಕೆ ತರಲು ನಿರಂತರವಾಗಿ ಶ್ರಮಿಸಿದ್ದಾರೆ. ಅಂತಹ ಮಹಾನ್ ನಾಯಕನಿಗೆ ಸಿಎಂ ಸ್ಥಾನ ದೊರೆಯಬೇಕು ಎಂದು ಒತ್ತಾಯಿಸಿದರು.ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈಗಾಗಲೇ ಎರಡೂವರೆ ವರ್ಷ ಪೂರೈಸಿದ್ದಾರೆ. ಗ್ರಾಮ ಪಂಚಾಯತಿಗಳಲ್ಲಿಯೂ 6 ತಿಂಗಳಲ್ಲಿ ಅಧ್ಯಕ್ಷರು ಬದಲಾಗುವಾಗ, ಸಿದ್ದರಾಮಯ್ಯನವರು ಡಿಕೆ ಶಿವಕುಮಾರ್ ಅವರಿಗೆ ಸಿಎಂ ಸ್ಥಾನ ಬಿಟ್ಟುಕೊಟ್ಟು ಮತ್ತಷ್ಟು ಅಭಿವೃದ್ಧಿ ಕೆಲಸಗಳಿಗೆ ಅವಕಾಶ ಮಾಡಿಕೊಡಬೇಕು ಎಂದು ಆಗ್ರಹಿಸಿದರು.
ಡಿ.ಕೆ. ಶಿವಕುಮಾರ್ ಅವರ ಕನಸಿನ ಮೇಕೆದಾಟು ಯೋಜನೆ ಜಾರಿಗೆ ಬಂದರೆ, ಬೆಂಗಳೂರಿನ ಜನರಿಗೆ ಕುಡಿಯುವ ನೀರಿನ ಸಮಸ್ಯೆ ಪರಿಹಾರವಾಗುತ್ತದೆ. ಈ ನಿಟ್ಟಿನಲ್ಲಿ ಡಿಕೆಶಿಗೆ ಸಿಎಂ ಸ್ಥಾನ ಬಿಟ್ಟುಕೊಡಬೇಕು ಎಂದು ಒಕ್ಕಲಿಗ ಸಂಘಟನೆ ಆಗ್ರಹಿಸಿತು. ಈ ಪೂಜಾ ಕಾರ್ಯದಲ್ಲಿ ಬಿ.ಎಂ. ಎಜುಕೇಶನ್ ಟ್ರಸ್ಟ್‌ನ ಕಾರ್ಯದರ್ಶಿ ರಾಮಕೃಷ್ಣ ಸೇರಿದಂತೆ ಹಲವು ಕಾರ್ಯಕರ್ತರು ಭಾಗವಹಿಸಿದ್ದರು.
