ಚಿಕ್ಕಮಗಳೂರು: ದೇಶದೆಲ್ಲೆಡೆ ಇಂದಿನಿಂದ ನವರಾತ್ರಿ ಹಬ್ಬದ ಸಂಭ್ರಮ ಮನೆ ಮಾಡಿದೆ. ನಮ್ಮ ರಾಜ್ಯದ ನಾಡ ಹಬ್ಬ ಮೈಸೂರು ದಸರಾ ಆರಂಭಗೊಂಡಿದ್ದು ಮೈಸೂರು ದಸರಾಕ್ಕೆ ಪ್ರೇರಣೆಯಾದ ಶೃಂಗೇರಿ ಶಾರದಾ ಮಠದಲ್ಲಿ ಇಂದಿನಿಂದ 9 ದಿನಗಳ ಕಾಲ ವೈಭವದ ನವರಾತ್ರಿ ಉತ್ಸವ (Sri Sharada Sharan Navaratri Mahotsava 2023) ನಡೆಯಲಿದೆ. ನಿತ್ಯವೂ ಶೃಂಗೇರಿ ಶಾರದಾಂಬೆ ನವ ರೂಪದಲ್ಲಿ ಭಕ್ತರಿಗೆ ದರ್ಶನ ನೀಡಲಿದ್ದಾಳೆ. ಶ್ರೀ ಆದಿ ಶಂಕರಾಚಾರ್ಯರು ಸ್ಥಾಪಿಸಿದ ನಾಲ್ಕು ಪ್ರಮುಖ ಪೀಠಗಳಲ್ಲಿ ಒಂದಾದ ಶೃಂಗೇರಿ ಶಾರದಾಂಬೆಯ ಸನ್ನಿಧಿ ಸಹ್ಯಾದ್ರಿ ಪರ್ವತಗಳ ತಪ್ಪಲಿನಲ್ಲಿರುವ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿಯಲ್ಲಿದೆ ತುಂಗಾ ನದಿ ತೀರದಲ್ಲಿ ವಾಸವಿರುವ ತಾಯಿ ಶಾರದೆ ಅಕ್ಷರ ದೇವಿ ಎಂದೆ ಖ್ಯಾತಿ ಪಡೆದಿದ್ದಾಳೆ.ಇಂದಿನಿಂದ ಶೃಂಗೇರಿ ಮಠದಲ್ಲಿ 9 ದಿನಗಳ ಕಾಲ ನವರಾತ್ರಿ ಉತ್ಸವ ನಡೆಯಲಿದ್ದು ,ಲಕ್ಷಾಂತರ ಭಕ್ತರು ಉತ್ಸವದಲ್ಲಿ ಭಾಗಿಯಾಗಲಿದ್ದಾರೆ.
ಶೃಂಗೇರಿಯಲ್ಲಿ ನವರಾತ್ರಿಯ ವೈಭವ:
ಶೃಂಗೇರಿ ದೇವಸ್ಥಾನವು ವಿದ್ಯಾಧಿದೇವತೆಯ ನೆಲವೀಡು. ನವರಾತ್ರಿ ಉತ್ಸವದ ಸಂದರ್ಭದಲ್ಲಿ ಇಲ್ಲಿ ಶಾರದೆಗೆ ಚಂಡಿಕಾ ಹೋಮ, ರಥೋತ್ಸವ, ವಿವಿಧ ಅಲಂಕಾರ, ಪೂಜೆ ನಡೆಯುತ್ತದೆ. ಇಲ್ಲಿ ಶಾರದಾ ದೇವಿ ನವರಾತ್ರಿ ಉತ್ಸವಗಳಲ್ಲಿ ಸರಸ್ವತಿ, ದುರ್ಗಾ, ಲಕ್ಷ್ಮೀ ರೂಪದಲ್ಲಿ ಪೂಜಿಸಲ್ಪಡುತ್ತಾಳೆ.
ಶೃಂಗೇರಿಯಲ್ಲಿ ವಿಜೃಂಭಣೆಯಿಂದ ನಡೆಯುವ ಹಬ್ಬಗಳಲ್ಲಿ ನವರಾತ್ರಿ ಹಬ್ಬವೂ ಒಂದು. ಈ ಸುಸಂದರ್ಭದಲ್ಲಿ ಮಹಾಭಿಷೇಕ, ಶತರುದ್ರಾಭಿಷೇಕ ನಡೆಯುತ್ತದೆ. ಶಾರದೆಗೆ ಪ್ರತಿದಿನವೂ ಒಂದೊಂದು ಅಲಂಕಾರ ನಡೆಯುತ್ತದೆ. ಹಂಸವಾಹನ ಅಲಂಕಾರ, ವೃಷಭವಾಹನ ಅಲಂಕಾರ, ಮಯೂರವಾಹನ ಅಲಂಕಾರ, ಗರುಡವಾಹನ ಅಲಂಕಾರ, ಇಂದ್ರಾಣಿ ಅಲಂಕಾರ, ವೀಣಾಶಾರದಾ ಅಲಂಕಾರ, ಮೋಹಿನಿ ಅಲಂಕಾರ, ರಾಜರಾಜೇಶ್ವರಿ ಅಲಂಕಾರ, ಸಿಂಹವಾಹನ ಅಲಂಕಾರ, ಗಜಲಕ್ಷ್ಮೀ ಅಲಂಕಾರಗಳನ್ನು ಮಾಡಲಾಗುತ್ತದೆ.