ಬೆಂಗಳೂರು, ನವೆಂಬರ್ 7, 2025 : ಪ್ರತಿ ಟನ್ ಕಬ್ಬಿಗೆ ₹3,500 ದರ ಘೋಷಣೆಗೆ ಆಗ್ರಹಿಸಿ ಕಬ್ಬು ಬೆಳೆಗಾರರು ಬೆಳಗಾವಿಯಲ್ಲಿ ನಡೆಸುತ್ತಿರುವ ಹೋರಾಟ ತೀವ್ರಗೊಂಡಿರುವ ಹಿನ್ನೆಲೆಯಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಸಕ್ಕರೆ ಕಾರ್ಖಾನೆ ಮಾಲೀಕರೊಂದಿಗೆ ಮಹತ್ವದ ಸಭೆ ನಡೆಸಿದ್ದಾರೆ.
ಈ ಸಭೆಯಲ್ಲಿ 38ಕ್ಕೂ ಹೆಚ್ಚು ಸಕ್ಕರೆ ಕಾರ್ಖಾನೆಗಳ ಮಾಲೀಕರು ಹಾಗೂ ಆಡಳಿತ ಮಂಡಳಿಯ ಪ್ರತಿನಿಧಿಗಳು ಪಾಲ್ಗೊಂಡಿದ್ದಾರೆ. ಸಚಿವರಾದ ಸತೀಶ್ ಜಾರಕಿಹೊಳಿ, ಎಂ.ಬಿ. ಪಾಟೀಲ್, ಆರ್.ಬಿ. ತಿಮ್ಮಾಪೂರ, ಲಕ್ಷ್ಮಿ ಹೆಬ್ಬಾಳ್ಕರ್, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಮುರುಗೇಶ್ ನಿರಾಣಿ, ರಾಜು ಅಸಿಫ್ ಸೇಟ್ ಸೇರಿದಂತೆ ಹಲವರು ಸಹ ಉಪಸ್ಥಿತರಿದ್ದಾರೆ. ಕಬ್ಬಿಗೆ ನೀಡಬಹುದಾದ ಬೆಲೆ ಮತ್ತು ರೈತರಿಗೆ ನ್ಯಾಯವಾದ ಪರಿಹಾರ ನೀಡುವ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೇರವಾಗಿ ಕಾರ್ಖಾನೆ ಮಾಲೀಕರೊಂದಿಗೆ ಚರ್ಚೆ ನಡೆಸುತ್ತಿದ್ದಾರೆ.
ಸಭೆಯ ಆರಂಭದಲ್ಲಿ, ಸಕ್ಕರೆ ಕಾರ್ಖಾನೆ ಮಾಲೀಕರು ತಮ್ಮ ವಾದ ಮಂಡಿಸಿದ್ದು, ಸಕ್ಕರೆ ಕಾರ್ಖಾನೆಗಳ ಆರ್ಥಿಕ ಸ್ಥಿತಿ ಉತ್ತಮ ಆಗಲು ರಾಜ್ಯ ಸರ್ಕಾರ ಸಹಕರಿಸಬೇಕು ಎಂದು ಮನವಿ ಮಾಡಿದರು. ಇದರ ಜೊತೆಗೆ, ಕಾರ್ಖಾನೆಗಳಿಂದ ಖರೀದಿ ಮಾಡುವ ವಿದ್ಯುತ್ ದರವನ್ನು ಪ್ರತಿ ಯೂನಿಟ್‌ಗೆ ₹5.50ಕ್ಕೆ ಹೆಚ್ಚಳ ಮಾಡಬೇಕು, ಸಕ್ಕರೆ ದರ ಏರಿಕೆ ಮಾಡಲು ರಾಜ್ಯ ಸರ್ಕಾರ ಕೇಂದ್ರದ ಮೇಲೆ ಒತ್ತಡ ತರಬೇಕು, ವಾಣಿಜ್ಯ ಮತ್ತು ಗೃಹ ಬಳಕೆಯ ಸಕ್ಕರೆಗೆ ಪ್ರತ್ಯೇಕವಾಗಿ ದರ ಏರಿಕೆ ಮಾಡಬೇಕು, ಹಾಗೂ ಎಥೆನಾಲ್ ಹಂಚಿಕೆ ಪ್ರಮಾಣದಲ್ಲಿ ಏರಿಕೆ ಮಾಡಬೇಕು ಎಂದು ಅವರು ಆಗ್ರಹಿಸಿದ್ದಾರೆ.
