ಚಿತ್ರದುರ್ಗ, ಡಿಸೆಂಬರ್ 25, 2025 : ಜಿಲ್ಲೆಯ ಹಿರಿಯೂರು ತಾಲೂಕಿನ ಗೊರ್ಲತ್ತು ಗ್ರಾಮದ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಖಾಸಗಿ ಬಸ್ ಸಂಪೂರ್ಣವಾಗಿ ಹೊತ್ತಿ ಉರಿದಿದ್ದು, ಹನ್ನೊಂದಕ್ಕೂ ಹೆಚ್ಚು ಪ್ರಯಾಣಿಕರು ದಾರುಣವಾಗಿ ಮೃತಪಟ್ಟಿದ್ದಾರೆ.
ಬೆಂಗಳೂರಿನಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಸೀಬರ್ಡ್ ಸಂಸ್ಥೆಯ ಸ್ಲೀಪರ್ ಕೋಚ್ ಬಸ್ ಹಾಗೂ ಲಾರಿ ನಡುವೆ ಸಂಭವಿಸಿದ ಡಿಕ್ಕಿಯ ರಭಸಕ್ಕೆ ನೋಡನೋಡುತ್ತಿದ್ದಂತೆಯೇ ಬೆಂಕಿ ಹತ್ತಿಕೊಂಡಿದೆ. ಕ್ಷಣಮಾತ್ರದಲ್ಲಿ ಇಡೀ ಬಸ್ ಬೆಂಕಿಯ ಕೆನ್ನಾಲಿಗೆಗೆ ತುತ್ತಾಗಿದ್ದು, ಪ್ರಯಾಣಿಕರು ಹೊರಬರಲಾರದೆ ಒಳಗೇ ಸಿಲುಕಿ ಬೆಂದು ಹೋಗಿದ್ದಾರೆ. ಈ ಭೀಕರ ದೃಶ್ಯದ ವಿಡಿಯೋಗಳು ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಜನರನ್ನು ಬೆಚ್ಚಿಬೀಳಿಸುವಂತಿವೆ.

ಅಪಘಾತದ ಸಮಯದಲ್ಲಿ ಬಸ್ಸಿನಲ್ಲಿ ಸುಮಾರು 15 ಮಹಿಳೆಯರು ಹಾಗೂ 14 ಪುರುಷರು ಪ್ರಯಾಣಿಸುತ್ತಿದ್ದರು ಎನ್ನಲಾಗಿದ್ದು, ಬೆಂಕಿ ವಿಪರೀತವಾಗಿದ್ದರಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸುಮಾರು ನಾಲ್ಕು ಕಿಲೋಮೀಟರ್‌ಗಳವರೆಗೆ ಸಂಚಾರ ದಟ್ಟಣೆ ಉಂಟಾಗಿತ್ತು. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಗಾಯಗೊಂಡವರನ್ನು ತಕ್ಷಣವೇ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳ ಸ್ಥಿತಿ ಗಂಭೀರವಾಗಿರುವುದರಿಂದ ಸಾವಿನ ಸಂಖ್ಯೆ ಇನ್ನು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಆತಂಕ ವ್ಯಕ್ತಪಡಿಸಲಾಗಿದೆ.
ಈ ಘಟನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀವ್ರ ಸಂತಾಪ ಸೂಚಿಸಿದ್ದು, ಅಧಿಕಾರಿಗಳಿಂದ ಸಂಪೂರ್ಣ ಮಾಹಿತಿ ಪಡೆದು ಸಂತ್ರಸ್ತರ ನೆರವಿಗೆ ನಿಲ್ಲುವಂತೆ ಸೂಚಿಸಿದ್ದಾರೆ. ರಾಜ್ಯ ಸರ್ಕಾರದ ವತಿಯಿಂದ ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ರೂಪಾಯಿ ಹಾಗೂ ಗಾಯಗೊಂಡವರಿಗೆ ತಲಾ 50 ಸಾವಿರ ರೂಪಾಯಿ ಪರಿಹಾರ ಘೋಷಿಸಲಾಗಿದೆ. ಇನ್ನು ಪ್ರಧಾನಿ ನರೇಂದ್ರ ಮೋದಿ ಅವರು ಕೂಡ ಈ ದುರಂತಕ್ಕೆ ಮೃತರಾಗಿ ಸಂತಾಪ ವ್ಯಕ್ತಪಡಿಸಿದ್ದು, ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ ಮೃತರ ಕುಟುಂಬಕ್ಕೆ 2 ಲಕ್ಷ ರೂಪಾಯಿ ಹಾಗೂ ಗಾಯಾಳುಗಳಿಗೆ 50 ಸಾವಿರ ರೂಪಾಯಿ ನೆರವು ಪ್ರಕಟಿಸಿದ್ದಾರೆ. ಅಪಘಾತದ ಕುರಿತು ತನಿಖೆ ನಡೆಸಿ ಕಾರಣ ಪತ್ತೆಹಚ್ಚುವಂತೆ ಸಿಎಂ ಆದೇಶಿಸಿದ್ದಾರೆ.
