ಹುಣಸೂರು, ಜುಲೈ 21, 2026 : ಮೈಸೂರು ಜಿಲ್ಲೆಯ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಒಂದೇ ಕುಟುಂಬದ ನಾಲ್ವರು ಶವವಾಗಿ ಪತ್ತೆಯಾಗಿರುವ ಭೀಕರ ಘಟನೆ ನಡೆದಿದೆ. ಹರೀಶ್ ಅಲಿಯಾಸ್ ಕಾಡು (40) ಎಂಬಾತ ತನ್ನ ಹೆಂಡತಿ ಹಾಗೂ ಇಬ್ಬರು ಮಕ್ಕಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, ಬಳಿಕ ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.
ಘಟನಾ ಸ್ಥಳಕ್ಕೆ ಹುಣಸೂರು ನಗರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಮಲ್ಲಿಕಾರ್ಜುನ ಬಾಲದಂಡಿ ಅವರು, ಫೈನಾನ್ಸ್ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಹರೀಶ್, ಕೃತ್ಯ ಎಸಗುವ ಮುನ್ನ ಡೆತ್ ನೋಟ್ ಬರೆದಿಟ್ಟಿರುವುದು ತಿಳಿದುಬಂದಿದೆ ಎಂದು ತಿಳಿಸಿದ್ದಾರೆ.
ಡೆತ್ ನೋಟ್‌ನಲ್ಲಿ ಸಾಲದ ಸುಳಿಗೆ ಸಿಲುಕಿರುವ ಬಗ್ಗೆ ಉಲ್ಲೇಖಿಸಲಾಗಿದ್ದು, ಸೈಟ್ ಒಂದರ ವಿಚಾರದಲ್ಲಿ ಸಾಲ ಹೆಚ್ಚಾಗಿತ್ತು ಎಂದು ಬರೆಯಲಾಗಿದೆ. 14 ವರ್ಷಗಳ ಹಿಂದೆ ಮದುವೆಯಾಗಿದ್ದ ಹರೀಶ್‌ಗೆ ಮೂರು ಸೈಟ್‌ಗಳು, ಸ್ವಂತ ಮನೆ ಹಾಗೂ ಕಾರು ಇತ್ತು. ಇವುಗಳನ್ನು ಯಾರ್ಯಾರಿಗೆ ನೀಡಬೇಕು ಎಂಬ ವಿವರವನ್ನೂ ಆತ ಡೆತ್ ನೋಟ್‌ನಲ್ಲಿ ಬರೆದಿಟ್ಟಿದ್ದಾನೆ.
ಹರೀಶ್ ತನ್ನ ತಾಯಿ ಹಾಗೂ ಹೆಂಡತಿ-ಮಕ್ಕಳೊಂದಿಗೆ ಒಂದೇ ಮನೆಯಲ್ಲಿ ವಾಸವಾಗಿದ್ದನು. ತಾಯಿಯನ್ನು ಕಳೆದ ಎರಡು ದಿನಗಳ ಹಿಂದೆ ಪ್ರವಾಸಕ್ಕೆ ಕಳುಹಿಸಿಕೊಟ್ಟಿದ್ದನು. ಸದ್ಯ ಘಟನೆಗೆ ಸಂಬಂಧಿಸಿದಂತೆ ಕೌಟುಂಬಿಕ ಸೇರಿದಂತೆ ಎಲ್ಲಾ ಆಯಾಮಗಳಲ್ಲೂ ತನಿಖೆ ಮುಂದುವರಿದಿದೆ ಎಂದು ಜಿಲ್ಲಾ ಎಸ್ಪಿ ಸ್ಪಷ್ಟಪಡಿಸಿದ್ದಾರೆ.
