ಹೆಚ್.ಡಿ.ಕೋಟೆ, ಡಿಸೆಂಬರ್ 17, 2025 : ಸಾಲದ ವಿಚಾರಕ್ಕೆ ಅಥವಾ ಹಣಕಾಸಿನ ಕಿತ್ತಾಟಕ್ಕೆ ಯುವಕನೋರ್ವನನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಪಟ್ಟಣದ ಮುಸ್ಲಿಂ ಬ್ಲಾಕ್‌ನಲ್ಲಿ ತಡರಾತ್ರಿ ನಡೆದಿದೆ.
ಪಟ್ಟಣದ ಮುಸ್ಲಿಂ ಬ್ಲಾಕ್ ನಿವಾಸಿ ಮೊಹಮ್ಮದ್ ರಫಿ (ಅಲಿಯಾಸ್ ಕಲಾಂ) ಕೊಲೆಯಾದ ದುರ್ದೈವಿ. ಅದೇ ಏರಿಯಾದ ನಿವಾಸಿ ತೌಹಿದ್ ಎಂಬಾತನೇ ಈ ಕೃತ್ಯ ಎಸಗಿದ್ದಾನೆ ಎಂದು ಕುಟುಂಬಸ್ಥರು ಗಂಭೀರ ಆರೋಪ ಮಾಡಿದ್ದಾರೆ.

ಮಂಗಳವಾರ ರಾತ್ರಿ ಸುಮಾರು 10 ಗಂಟೆಯ ಸಮಯದಲ್ಲಿ ಕಲಾಂ ಅವರು ದೊಡ್ಡ ಮಸೀದಿಯ ಹಿಂಭಾಗದಲ್ಲಿ ಕುಳಿತಿದ್ದರು. ಈ ವೇಳೆ ಅಲ್ಲಿಗೆ ಬಂದ ತೌಹಿದ್, ಮಾರಕಾಸ್ತ್ರ ಹಾಗೂ ದೊಣ್ಣೆಗಳಿಂದ ಕಲಾಂ ಮೇಲೆ ಮನಬಂದಂತೆ ಹಲ್ಲೆ ನಡೆಸಿದ್ದಾನೆ. ತೀವ್ರವಾಗಿ ಗಾಯಗೊಂಡಿದ್ದ ಕಲಾಂ ಅವರನ್ನು ಕುಟುಂಬಸ್ಥರು ತಕ್ಷಣವೇ ಎಚ್.ಡಿ.ಕೋಟೆ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದ್ದರು. ಪರಿಸ್ಥಿತಿ ಗಂಭೀರವಾಗಿದ್ದರಿಂದ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಆಸ್ಪತ್ರೆಗೆ ರವಾನಿಸಲಾಯಿತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ ಸುಮಾರು 3 ಗಂಟೆಯ ವೇಳೆಗೆ ಕಲಾಂ ಮೃತಪಟ್ಟಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಮೃತನ ಸಹೋದರಿ ರುಕ್ತಾನ ಅವರು ಎಚ್.ಡಿ.ಕೋಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP), ಡಿವೈಎಸ್ಪಿ, ಸರ್ಕಲ್ ಇನ್ಸ್‌ಪೆಕ್ಟರ್ ಹಾಗೂ ಸಬ್ ಇನ್ಸ್‌ಪೆಕ್ಟರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ತಲೆಮರೆಸಿಕೊಂಡಿರುವ ಆರೋಪಿ ತೌಹಿದ್ ಪತ್ತೆಗಾಗಿ ಪೊಲೀಸರು ವಿಶೇಷ ತಂಡವನ್ನು ರಚಿಸಿ ಜಾಲ ಬೀಸಿದ್ದಾರೆ.
ಹಣಕಾಸಿನ ವ್ಯವಹಾರವೇ ಈ ಕೊಲೆಗೆ ಪ್ರಮುಖ ಕಾರಣ ಎಂದು ಶಂಕಿಸಲಾಗಿದ್ದು, ಪೊಲೀಸರು ಆರೋಪಿಗಾಗಿ ಬಲೆ ಬೀಸಿದ್ದಾರೆ.
