ಮೈಸೂರು, ನವೆಂಬರ್ 7, 2025 : ರಾಜ್ಯದ ವಿವಿಧೆಡೆ ಕಬ್ಬು ಬೆಳೆಗಾರರ ಪ್ರತಿಭಟನೆ ವಿಚಾರವಾಗಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಮೈಸೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನಡೆಗೆ ಟೀಕೆ ವ್ಯಕ್ತಪಡಿಸಿದ್ದಾರೆ.
ಕಬ್ಬು ಬೆಳೆಗಾರರ ಸಮಸ್ಯೆ ಅತ್ಯಂತ ಚಿಕ್ಕ ವಿಚಾರವಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮನಸ್ಸು ಮಾಡಿದರೆ ಅದನ್ನು ಸುಲಭವಾಗಿ ಬಗೆಹರಿಸಬಹುದು. ಆದರೆ, ಸಿಎಂ ಅವರು ತಮ್ಮ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಪ್ರಧಾನಮಂತ್ರಿಯವರಿಗೆ ಪತ್ರ ಬರೆದಿದ್ದಾರೆ. ದೇಶದ ಯಾವ ರಾಜ್ಯದಲ್ಲಿ ಕಬ್ಬು ಬೆಳೆಗಾರರ ಸಮಸ್ಯೆ ಬಗೆಹರಿಸಲು ಪ್ರಧಾನಮಂತ್ರಿ ಮಧ್ಯಸ್ಥಿಕೆ ವಹಿಸಿದ್ದಾರೆ ಎಂಬುದನ್ನು ಹೇಳಬೇಕು ಎಂದು ಪ್ರಶ್ನಿಸಿದ್ದಾರೆ.
ಈ ಸಮಸ್ಯೆ ವಿವಾದದಲ್ಲಿ ಜನಪ್ರತಿನಿಧಿಗಳನ್ನು ಕರೆದು ಮಾತನಾಡುವುದು ಏನಿದೆ? ಈ ಬಗ್ಗೆ ಸಿಎಂ ವೈಯುಕ್ತಿಕವಾಗಿ ನಿರ್ಧಾರ ತೆಗೆದುಕೊಳ್ಳಬಹುದು. ಆ ಕೆಲಸ ಮಾಡುವುದು ಬಿಟ್ಟು, ಅವರು ಕೇಂದ್ರದ ಮೇಲೆ ಆರೋಪ ಮಾಡುತ್ತಿದ್ದಾರೆ. ಬೆಳಗಾವಿಯ ಸ್ಥಳೀಯ ಜನಪ್ರತಿನಿಧಿಗಳ ಲಾಬಿ ಅಥವಾ ಒತ್ತಡಕ್ಕೆ ಸಿಎಂ ಮಣಿದಿರುವ ಸಾಧ್ಯತೆ ಇದೆ ಎಂದು ಕುಮಾರಸ್ವಾಮಿ ಅನುಮಾನ ವ್ಯಕ್ತಪಡಿಸಿದ್ದಾರೆ. ಮೊದಲು ಸಿಎಂ ಕಬ್ಬು ಬೆಳೆಗಾರರ ಹಿತ ಕಾಯುವ ಕೆಲಸ ಮಾಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ಜೆಡಿಎಸ್ ಪಕ್ಷದ ಯಾವೊಬ್ಬ ನಾಯಕರ ಕಬ್ಬು ಕಾರ್ಖಾನೆಯೂ ಇಲ್ಲ. ಬಂಡೇಪ್ಪ ಕಾಶಂಪೂರ ಅವರ ಕಾರ್ಖಾನೆ ಈ ಹಿಂದೆ ಇತ್ತು, ಅದನ್ನೂ ಅವರು ಮಾರಿದ್ದಾರೆ. ನಮ್ಮ ನಾಯಕರ ಯಾವುದೇ ಸಕ್ಕರೆ ಕಾರ್ಖಾನೆ ಇಲ್ಲ, ಇದನ್ನು ಜನರಿಗೆ ತಿಳಿಸಲು ಬಯಸುತ್ತೇನೆ ಎಂದು ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ.
ತಮ್ಮ ಮುಖ್ಯಮಂತ್ರಿ ಅವಧಿಯ ನೆನಪು: “ನಾನು ಎರಡು ಬಾರಿಯೂ ಆಕಸ್ಮಿಕವಾಗಿ ಮುಖ್ಯಮಂತ್ರಿ ಆದೆ. ಒಮ್ಮೆ ಬಿಜೆಪಿ ಜೊತೆ ಸೇರಿ ಸಿಎಂ ಆದೆ, ಮತ್ತೊಮ್ಮೆ ಕಾಂಗ್ರೆಸ್ ಜೊತೆ ಸೇರಿ ಸಿಎಂ ಆದೆ. ನಾನು ಮುಖ್ಯಮಂತ್ರಿ ಆಗಿದ್ದಾಗ ರೈತರ ಸಮಸ್ಯೆ ಬಗೆಹರಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸಿದ್ದೇನೆ. ಕಬ್ಬು ಬೆಳೆಗಾರ ರೈತರ ಬಾಕಿ ಹಣ ಪಾವತಿಸಲು ಕ್ರಮ ಕೈಗೊಂಡಿದ್ದೇನೆ” ಎಂದು ಹೇಳಿದ್ದಾರೆ.
ರಾಜ್ಯ ಸರ್ಕಾರಕ್ಕೆ ಮನವಿ: ಕಬ್ಬು ಬೆಳೆಗಾರರ ಬಾಕಿ ಹಣ ಪಾವತಿಸಲು ರಾಜ್ಯ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು. ಬಾಕಿ ಹಣ ಪಾವತಿಸಲು ರಾಜ್ಯ ಸರ್ಕಾರಕ್ಕೆ ಹಣಕಾಸಿನ ಕೊರತೆಯಿಲ್ಲ. ಈ ಬಗ್ಗೆ ಸಿಎಂ ಮನಸ್ಸು ಮಾಡಬೇಕು ಎಂದು ಕುಮಾರಸ್ವಾಮಿ ಆಗ್ರಹಿಸಿದ್ದಾರೆ.
ಡಿಕೆ ಶಿವಕುಮಾರ್ ಹೇಳಿಕೆಗಳ ಬಗ್ಗೆ ಪ್ರತಿಕ್ರಿಯೆ: ಇದೇ ವೇಳೆ, ಡಿಕೆ ಶಿವಕುಮಾರ್ ಅವರ ಹೇಳಿಕೆಗಳ ಕುರಿತು ಪ್ರತಿಕ್ರಿಯಿಸಿದ ಕುಮಾರಸ್ವಾಮಿ, “ನವೆಂಬರ್‌ನಲ್ಲಿ ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ. ನನಗೆ ಸಿದ್ದರಾಮಯ್ಯನವರ ಗುಣ ಗೊತ್ತಿದೆ. ನಮ್ಮ ಪಕ್ಷದಲ್ಲಿ ಇದ್ದಾಗಲೇ ಅವರ ಗುಣ ತಿಳಿದುಕೊಂಡಿದ್ದೇವೆ. ಹೀಗಾಗಿ ಯಾವ ಬದಲಾವಣೆಯೂ ಆಗುವುದಿಲ್ಲ” ಎಂದಿದ್ದಾರೆ.
“ಡಿ.ಕೆ. ಶಿವಕುಮಾರ್ ಯಾವಾಗಲೂ ದೇವರ ಜೊತೆ ಮಾತನಾಡುತ್ತೇನೆ ಎನ್ನುತ್ತಾರೆ. ದೇವರು ಅವರಿಗೆ ಏನೇನು ಹೇಳಿದೆಯೋ ನಮಗೇನು ಗೊತ್ತು. 2028ಕ್ಕೂ ಮತ್ತೆ ಕಾಂಗ್ರೆಸ್ ಸರ್ಕಾರ ಬರುತ್ತದೆ ಎಂದು ಡಿ ಕೆ ಶಿವಕುಮಾರ್ ಹೇಳಿದ್ದಾರೆ. 20, 10 ವರ್ಷ ನಾವೇ ಅಧಿಕಾರದಲ್ಲಿರುತ್ತೇವೆ ಎಂದು ಹೇಳಿದವರು ಏನಾಗಿದ್ದಾರೆ ಎಂಬುದು ನನಗೆ ಗೊತ್ತಿದೆ. 2028ಕ್ಕೆ ಏನೇನಾಗುತ್ತೋ ಯಾರಿಗೆ ಗೊತ್ತು ಬಿಡಿ” ಎಂದು ವ್ಯಂಗ್ಯವಾಡಿದ್ದಾರೆ.
